ಬೆಂಗಳೂರು: ರಾಜ್ಯದ ಎಲ್‌ಕೆಜಿ ಇಂದೇ ಪಿಯುಸಿ ತನಕ ರಾಜ್ಯದ ಎಲ್ಲಾ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸಾರಿಗೆ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ ಖಾತೆ ಮೂಲಕ ಮಾಹಿತಿ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸರಕಾರಿ ಶಾಲೆಗಳ ಬಲವರ್ಧನೆಗಾಗಿ ಸರ್ಕಾರದ ಈ ದಿಟ್ಟ ಹೆಜ್ಜೆ. ಮಕ್ಕಳ ಹಾಜರಾತಿ ಹೆಚ್ಚಿಸಲು ಹಾಗೂ ಶಿಕ್ಷಣದ ಗುಣಮಟ್ಟ ಸುಧಾರಿಸಲು ಈ ಉಚಿತ ಸಾರಿಗೆ ಸೇವೆ ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಎಲ್‌ಕೆಜಿ ಇಂದ ಪಿಯುಸಿ ಮಟ್ಟದವರೆಗೆ ಸರಕಾರಿ ಶಾಲೆಗಳಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಈ ಯೋಜನೆಯ ಅನುಕೂಲ ಲಭಿಸಲಿದೆ ಎಂದು ಡಿಸಿಎಂ ಸ್ಪಷ್ಟಪಡಿಸಿದ್ದಾರೆ.
ಬಡ ಕುಟುಂಬಗಳ ಮಕ್ಕಳಿಗೆ ಶೈಕ್ಷಣಿಕ ಹಾಗೂ ಆರ್ಥಿಕ ನೆರವು ನೀಡುವ ಉದ್ದೇಶವಿರುವ ಈ ಯೋಜನೆಯ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಯತ್ತ ಸರ್ಕಾರ ದಿಟ್ಟ ಹೆಜ್ಜೆ ಹಾಕಿದೆ, ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ನಿರ್ಧಾರದಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಾಗಲಿದ್ದು, ಶಿಕ್ಷಣ ಕ್ಷೇತ್ರದ ಸಮಾನತೆಯ ಕಡೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ ಎಂದರು.