ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 17ನೇ ಬಜೆಟ್ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ ಮತ್ತು ಇದು ಸ್ವತಃ ಆಡಳಿತ ಪಕ್ಷದ ಶಾಸಕರಲ್ಲಿಯೇ ನಿರುತ್ಸಾಹ ಮೂಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಕಲಬುರಗಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಬಜೆಟ್ ಬಗ್ಗೆ ಅಸಮಾಧಾನ
"ಸಿಎಂ ಸಿದ್ದರಾಮಯ್ಯ ಅವರ ಬಜೆಟ್ ಮೇಲೆ ರಾಜ್ಯದ ಜನತೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ಬಜೆಟ್ ಜನರ ನಿರೀಕ್ಷೆಯನ್ನು ಸಂಪೂರ್ಣವಾಗಿ ನುಚ್ಚುನೂರು ಮಾಡಿದೆ. ಇದು ರೈತ ವಿರೋಧಿಯಾಗಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿಗೆ ಯಾವುದೇ ಕೊಡುಗೆ ನೀಡಿಲ್ಲ. ಸ್ವತಃ ಕಾಂಗ್ರೆಸ್ ಪಾಳೆಯದಲ್ಲೇ ಈ ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತವಾಗುತ್ತಿದೆ," ಎಂದು ವಿಜಯೇಂದ್ರ ಕಿಡಿಕಾರಿದರು.
ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ: ಪ್ರಿಯಾಂಕ್ ಖರ್ಗೆಗೆ ಟಾಂಗ್
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತು ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ನೇರ ವಾಗ್ದಾಳಿ ನಡೆಸಿದರು. "ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕದ ಮೇಲೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಹಿಡಿತವಿದ್ದರೂ ಈ ಭಾಗ ಅಭಿವೃದ್ಧಿಯಲ್ಲಿ ಇನ್ನೂ ಹಿಂದುಳಿದಿದೆ. ಪ್ರಿಯಾಂಕ್ ಖರ್ಗೆ ಅವರು ಯಾವಾಗಲೂ ಪ್ರಧಾನಿ ಮೋದಿ ಅವರನ್ನು ಮತ್ತು ಕೇಂದ್ರ ಸರ್ಕಾರವನ್ನು ಟೀಕಿಸುವುದರಲ್ಲೇ ನಿರತರಾಗಿದ್ದಾರೆ," ಎಂದು ಟೀಕಿಸಿದರು.
ಅಂತರಾಷ್ಟ್ರೀಯ ವಿಷಯ ಬಿಟ್ಟು ಜನರತ್ತ ಗಮನಹರಿಸಿ
"ಸಚಿವರು ದೇಶದ ಚಿಂತೆ ಅಥವಾ ಅಂತರಾಷ್ಟ್ರೀಯ ವಿಷಯಗಳ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು, ಮೊದಲು ತಮ್ಮ ಭಾಗದ ಅಭಿವೃದ್ಧಿಯ ಬಗ್ಗೆ ಗಮನಹರಿಸಲಿ. ಕಲ್ಯಾಣ ಕರ್ನಾಟಕದ ಜನರ ಹಿತದೃಷ್ಟಿಯಿಂದ ಅಭಿವೃದ್ಧಿ ಕ್ರಮಗಳನ್ನು ಕೈಗೊಳ್ಳುವುದು ಅವರ ಆದ್ಯತೆಯಾಗಲಿ," ಎಂದು ವಿಜಯೇಂದ್ರ ಅವರು ಸಲಹೆ ನೀಡಿದರು.